Ad image

ಎಸ್‌ಎಲ್ ಭೈರಪ್ಪ ವಿಧಿವಶ – ಒಡನಾಟ ನೆನೆದು ಪ್ರಧಾನಿ ಮೋದಿ ಸಂತಾಪ

Team SanjeMugilu
1 Min Read
ನವದೆಹಲಿ: ಸಾಹಿತಿ, ಅಕ್ಷರ ಮಾಂತ್ರಿಕ ಎಸ್.ಎಲ್.ಭೈರಪ್ಪ  ಅವರ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿರುವ ಅವರು, ತಮ್ಮ ಅಕ್ಷರಗಳಿಂದ ನಮ್ಮ ಆತ್ಮವನ್ನು ಕಲಕಿ, ಇಡೀ ಭಾರತವನ್ನು ಅಧ್ಯಯನ ಮಾಡಿದ್ದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದರು. ಅವರ ಬರಹಗಳು ಇಂದಿನ ಪೀಳಿಗೆಯ ಮೇಲೆ ಪ್ರಭಾವ ಬೀರಿದ್ದವು.

ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರು ಹೊಂದಿದ್ದ ಉತ್ಸಾಹವು ಮುಂದಿನ ಯುವಮನಸ್ಸುಗಳನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ದೇವರು ಅವರ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಅವರ ಜೊತೆಗಿದ್ದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ  ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ  ಹೃದಯಸ್ತಂಭನದಿಂದ ಇಂದು (ಸೆ.24) ಮಧ್ಯಾಹ್ನ 2:38ಕ್ಕೆ  ನಿಧನರಾದರು.

ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್‌  ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರು ಪಡೆದಿದೆ.  ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು  ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ

Share This Article