Ad image

ಲೈಂಗಿಕ ಕಿರುಕುಳ ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ

Team SanjeMugilu
1 Min Read

ನವದೆಹಲಿ: 17 ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ  ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 50- 55 ಲಕ್ಷ ರೂ. ವಿತ್‌ಡ್ರಾ ಮಾಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಖಾತೆ ತೆರೆಯುವ ಮತ್ತು ವರ್ಗಾವಣೆಯ ಸಮಯದಲ್ಲಿ ವಿಭಿನ್ನ ದಾಖಲೆಗಳನ್ನು ಸಲ್ಲಿಸುವ ಮೂಲಕ ಎರಡು ಹೆಸರುಗಳಲ್ಲಿ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ. ಎಫ್‌ಐಆರ್ ದಾಖಲಾದ ನಂತರ ಸುಮಾರು 50-55 ಲಕ್ಷ ರೂ.ಗಳನ್ನು ವಿತ್‌ಡ್ರಾ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ಇನ್ನೂ ಆರಂಭಿಕ ಹಂತದಲ್ಲಿದ್ದು, ವಂಚನೆ, ಪಿತೂರಿ ಮತ್ತು ಹಣ ದುರುಪಯೋಗದ ಸತ್ಯಾಂಶ ಹೊರ ಬರಬೇಕಾದರೆ ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಲಾಗಿದೆ. ಪ್ರಕರಣದ ಗಂಭೀರತೆ ನೋಡಿ ದೆಹಲಿ ಹೈಕೋರ್ಟ್‌ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೈತನ್ಯಾನಂದ ಸ್ವಾಮೀಜಿ ‘ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ರಿಸರ್ಚ್’ನ ಆಸ್ತಿಯನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳಲು ‘ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ರಿಸರ್ಚ್ ಫೌಂಡೇಶನ್ ಟ್ರಸ್ಟ್’ ಎಂಬ ನಕಲಿ ಟ್ರಸ್ಟ್ ಸ್ಥಾಪಿಸಿದ್ದರು. ಈ ವಿಚಾರ ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ.

ಸ್ವಾಮೀಜಿ ವಿರುದ್ಧ 17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪವಿದೆ. ವಿದ್ಯಾರ್ಥಿನಿಯರ ಮೊಬೈಲ್ ಫೋನ್‌ಗಳು ಮತ್ತು ಮೂಲ ಪ್ರಮಾಣಪತ್ರಗಳನ್ನು ವಶಪಡಿಸಿಕೊಂಡು ಸ್ವಾಮೀಜಿಯ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

Share This Article