Ad image

ಅಲ್ಪಸಂಖ್ಯಾತ ಇಲಾಖೆ ವಸತಿ ಶಾಲೆಯ ಪಿಯು ವಿದ್ಯಾರ್ಥಿನಿ ಗರ್ಭಿಣಿ!

Team SanjeMugilu
1 Min Read

ಕೊಪ್ಪಳ: ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಆರೋಪಿಯು ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ.

ಮದುವೆಯ ಆಮಿಷವೊಡ್ಡಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೆಬ್ರವರಿ 19ರಂದು ಬಾಲಕಿಗೆ ರಕ್ತಸ್ರಾವವಾಗಿದ್ದ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾದಣೆ ನಡೆಸಿದಾಗ ಗರ್ಭಿಣಿಯಾಗಿರುವುದು ಬಹಿರಂಗವಾಗಿದೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕರಣ ಬಹಿರಂಗವಾದ ಬಳಿಕ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯವನ್ನು ಮುಚ್ಚಿಡಲು ಯತ್ನಿಸಿದರೆಂಬ ಆರೋಪದ ಹಿನ್ನೆಲೆ ವಸತಿಶಾಲೆಯ ಪ್ರಾಂಶುಪಾಲರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ. ಪ್ರಾಂಶುಪಾಲರ ಅಮಾನತಿಗೆ ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ನಿಖೆ ಮುಂದುವರಿಸಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಅಪ್ರಾಪ್ತೆಯರ ಸುರಕ್ಷತೆ ಹಾಗೂ ವಸತಿಶಾಲೆಗಳ ಮೇಲ್ವಿಚಾರಣೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂಬ ಆಗ್ರಹವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಕೊಪ್ಪಳದ ಕುಕನೂರು ವಿದ್ಯಾರ್ಥಿನಿಲಯದಲ್ಲಿ ಅಪ್ರಾಪ್ತ ಬಾಲಕಿಗೆ ಹೆರಿಗೆಯಾದ ಪ್ರಕರಣ ಕಳೆದ ನವೆಂಬರ್​​ನಲ್ಲಿ ವರದಿಯಾಗಿ ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿತ್ತು. ನಂತರ ಬಾಲಕಿಯ ಸ್ಥಿತಿಗೆ ಕಾರಣನಾದ ಯುವಕನನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಅಂಥದ್ದೇ ಘಟನೆ ಮರುಕಳಿಸಿದೆ.

Share This Article