ಯಾದಗಿರಿ: ಜಿಲ್ಲೆಯಲ್ಲಿ ಸರ್ಕಾರಿ ಕಟ್ಟಡದ ದುರುಪಯೋಗಪಡಿಸಿಕೊಂಡ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಯಾದಗಿರಿ ತಾಲೂಕಿನ ಲಿಂಗೇರಿ ಸ್ಟೇಷನ್ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಅಕ್ರಮವಾಗಿ ಕೋಚಿಂಗ್ ಸೆಂಟರ್ ಆರಂಭಿಸಿರುವ ಆರೋಪ ಕೇಳಿಬಂದಿದೆ.
ಪ್ರತಿ ತಿಂಗಳು ತಲಾ 5 ಸಾವಿರ ರೂ ಶುಲ್ಕ!
ದೇವಿಂದ್ರಪ್ಪ ಎಂಬಾತ ಅಧಿಕಾರಿಗಳಿಗೆ ಹಣ ನೀಡಿ ಹಾಸ್ಟೆಲ್ ಕಟ್ಟಡವನ್ನು ಬಾಡಿಗೆ ಪಡೆದು ಬೇಸಿಗೆ ಶಿಬಿರದ ಹೆಸರಿನಲ್ಲಿ ಸುಮಾರು 50ಕ್ಕೂ ಹೆಚ್ಚು ಮಕ್ಕಳಿಗೆ ಕೋಚಿಂಗ್ ನೀಡುತ್ತಿದ್ದಾನೆ ಎಂಬ ಆರೋಪವಿದೆ. ಹಾಸ್ಟೆಲ್ ಮಕ್ಕಳಿಗೆ ಮಾತ್ರವಲ್ಲದೆ ಹೊರಗಿನ ಮಕ್ಕಳಿಂದಲೂ ಪ್ರತಿ ತಿಂಗಳು ತಲಾ 5 ಸಾವಿರ ರೂಪಾಯಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ ವೇಳೆಯೂ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಕೊಠಡಿಗಳಲ್ಲಿ ಉಳಿಸಲಾಗುತ್ತಿದೆ ಎಂಬ ಆರೋಪವೂ ಇದೆ.
ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯ
ಸಾಮಾಜಿಕ ಕಾರ್ಯಕರ್ತ ಉಮೇಶ್ ಹಾಗೂ ಸ್ಥಳೀಯ ನಾಗರಾಜ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿ ಸರ್ಕಾರಿ ಕಟ್ಟಡವನ್ನು ದುರುಪಯೋಗ ಪಡಿಸಲಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
