Ad image

ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೆಲ್ತ್ ಎಮರ್ಜೆನ್ಸಿ? ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್

Team SanjeMugilu
2 Min Read

ಬೆಂಗಳೂರು: ಕರ್ನಾಟಕದ  ಸರ್ಕಾರಿ ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11 ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ ಪರೀಕ್ಷೆ ಸೇರಿದಂತೆ ಸಾಮಾನ್ಯ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿರುವ ರೋಗಿಗಳಿಗೆ ಇದು ದೊಡ್ಡ ತೊಂದರೆಯಾಗುವ ಆತಂಕ ವ್ಯಕ್ತವಾಗಿದೆ.

ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುತ್ತಿರುವುದರಿಂದ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ.

ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮುಷ್ಕರಕ್ಕೆ ಕಾರಣವೇನು?
ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಹಲವು ವರ್ಷಗಳಿಂದ ಬಾಕಿಯಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯಲು ಈ ಮುಷ್ಕರಕ್ಕೆ ಕರೆ ನೀಡಿದೆ. ಕಳೆದ ನಾಲ್ಕು ವರ್ಷಗಳಿಂದ ನಡೆಯದಿರುವ ವೃಂದ ಮತ್ತು ನೇಮಕಾತಿ ಪ್ರಕ್ರಿಯೆ, 13 ವರ್ಷಗಳಿಂದ ಪರಿಷ್ಕರಣೆಗೊಳ್ಳದ ವೈದ್ಯರ ಜೇಷ್ಠಾತಾ ಪಟ್ಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಸೇರಿದಂತೆ ಒಟ್ಟು 15 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘವು ಹೋರಾಟಕ್ಕೆ ಮುಂದಾಗಿದೆ.

ವೈದ್ಯರ ಬೇಡಿಕೆಗಳ ಈಡೇರಿಕೆಗೆ ನಡೆದ 7 ಸಭೆ ವಿಫಲ
ವೈದ್ಯರ ಬೇಡಿಕೆಗಳನ್ನು ಚರ್ಚಿಸಲು ಆರೋಗ್ಯ ಇಲಾಖೆ ಇದುವರೆಗೆ ಏಳು ಸಭೆಗಳನ್ನು ನಡೆಸಿದೆ. ಮಾರ್ಚ್ 2ರಂದು ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯೂ ಫಲಪ್ರದವಾಗಲಿಲ್ಲ. ಸರ್ಕಾರದಿಂದ ಯಾವುದೇ ಲಿಖಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಬೇಕಾಯಿತು ಎಂದು ಸಂಘದ ನಾಯಕರು ತಿಳಿಸಿದ್ದಾರೆ.

ಮಾರ್ಚ್ 16 ರಿಂದ ತೀವ್ರ ಸ್ವರೂಪದ ಹೋರಾಟ
ಮುಷ್ಕರದ ಭಾಗವಾಗಿ ಮಾರ್ಚ್ 11ರಿಂದ ವೈದ್ಯರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿಯನ್ನು ಧರಿಸಿ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ ಮಾರ್ಚ್ 16ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರಾಗುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.

ಈ ಸಂಬಂಧವಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ. ರವೀಂದ್ರನಾಥ್ ಮೇಟಿ ಅವರ ನೇತೃತ್ವದಲ್ಲಿ ವೈದ್ಯರು ಈಗಾಗಲೇ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಸರ್ಕಾರಿ ವೈದ್ಯರ ಮುಷ್ಕರದಿಂದ ರಾಜ್ಯದ ಆರೋಗ್ಯ ಸೇವೆಗಳ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದ್ದು, ವಿಶೇಷವಾಗಿ ಬಡ ರೋಗಿಗಳಲ್ಲಿ ಆತಂಕ ಹೆಚ್ಚಾಗಿದೆ.

Share This Article